ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ, ಟಿಕೆಟ್ ಕೈತಪ್ಪುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬರೋಬ್ಬರಿ 62,000 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎದುರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಅರುಣ್ ಕುಮಾರ್ ಪುತ್ತಿಲ ಪರಾಭವಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಹೀನಾಯವಾಗಿ ಸೋಲನ್ನಪ್ಪಿದ್ದರು.
ಇದಾದ ಬಳಿಕ ಪುತ್ತಿಲ ಪರಿವಾರ ಸಂಘಟನೆಯನ್ನು ಮಾಡಿಕೊಂಡಿದ್ದು, ಅರುಣ್ ಕುಮಾರ್ ಪುತ್ತಿಲ ಅವರ ಅಭಿಮಾನಿಗಳು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕೆಂದು ಅಭಿಯಾನ ನಡೆಸುತ್ತಿದ್ದರು. ಒಂದೊಮ್ಮೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಲೋಕಸಭಾ ಚುನಾವಣೆಯಲ್ಲೂ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಅರುಣ್ ಕುಮಾರ್ ಪುತ್ತಿಲ ಅವರನ್ನು ನವದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಟಿಕೆಟ್ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸಿಗಲಿದೆಯಾ ಎಂಬ ಚರ್ಚೆಗೆ ಕಾರಣವಾಗಿದೆ. ಬಿ.ಎಲ್. ಸಂತೋಷ್ ಹಾಗೂ ಅರುಣ್ ಕುಮಾರ್ ಪುತ್ತಿಲ ಮಾತುಕತೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸ್ಥಿತಿಗತಿ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಪುತ್ತಿಲ್ಲ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.