ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿತು. ಈ ವೇಳೆ ಮಾತನಾಡಿರುವ ಸಿ.ಟಿ. ರವಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರಿಗೆ ಕೇಸರಿ ಕಂಡರೆ ಆಗದ ಮಾನಸೀಕತೆ ಇದೆ. ಹೀಗಾಗಿ ವೇಣುಗೋಪಾಲ್ ಕುಟುಂಬಕ್ಕೆ ಸಿಎಂ ಸಾಂತ್ವನ ಹೇಳಿಲ್ಲ. ವೇಣುಗೋಪಾಲ್ ಕೇಸರಿ ನೇತೃತ್ವ ವಹಿಸಿದ್ದ ಕಾರಣಕ್ಕಾಗಿ ಸಾಂತ್ವನ ಹೇಳಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಿಂದೂ ಸಂಘಟನೆಗಳ ಚಟುವಟಿಕೆಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಕೊಲೆ ಆರೋಪಿಗಳು ಬಲಾಢ್ಯರ ಜೊತೆ ಸಂಪರ್ಕ ಹೊಂದಿದ್ದಾರೆ. ಪ್ರಕರಣವನ್ನು ದುರ್ಬಲಗೊಳಿಸುವ ಶಕ್ತಿಯೂ ಆರೋಪಿಗಳಿಗೆ ಇದೆ ಎಂದು ಹೇಳಿದ್ದಾರೆ.