ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿ ಮಹಿಳೆಗೆ ಮಾಸಿಕ 2,000 ರೂ. ನೆರವು ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆ ಆಗಸ್ಟ್ 16 ರಿಂದ ಜಾರಿಯಾಗಲಿದೆ. ರಾಜ್ಯದ 1.28 ಕೋಟಿ ಮಹಿಳೆಯರು ಇದರ ಲಾಭ ಪಡೆಯಲಿದ್ದಾರೆ. ಯೋಜನೆಗಾಗಿ ವಾರ್ಷಿಕ 36 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಂದರು.
ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳನ್ನು ಹಾಗೂ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮತ್ತು ಗೃಹಲಕ್ಷ್ಮೀ ಯೋಜನೆ ನೊಂದಣಿ ಸೇವಾ ಕೇಂದ್ರಗಳನ್ನಾಗಿ ಗುರುತಿಸಲಾಗಿದ್ದು, ಸದರಿ ಕೇಂದ್ರಗಳಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಕೇಂದ್ರದಲ್ಲಿ ಯಾವುದೇ ಸೇವಾ ಶುಲ್ಕ ನೀಡಬೇಕಿಲ್ಲ. ಇನ್ನು ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ.
ಗೃಹ ಲಕ್ಷ್ಮೀ ಯೋಜನೆಗೆ ಯಾರು ಅರ್ಹರು?
ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆ ಇದಕ್ಕೆ ಅರ್ಹರಾಗಿದ್ದಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿದಲ್ಲಿ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಇನ್ನು ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ.
ನೋಂದಣಿ ಪ್ರಕ್ರಿಯೆ:
ಫಲಾನುಭವಿ ನೊಂದಣಿ ಪ್ರಕ್ರಿಯೆ ಎರಡು ವಿಧಾನದ ಮೂಲಕ ಮಾಡಲಾಗುತ್ತಿದೆ. ಮೊದಲನೇಯದಾಗಿ ಈಗಾಗಲೇ ಪಡಿತರ ಚೀಟಿಯಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೋಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೊಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್. ಮೂಲಕ ತಿಳಿಸಲಾಗುತ್ತದೆ. ಇದಲ್ಲದೆ ಟೋಲ್ ಫ್ರೀ ಸಂಖ್ಯೆ 1902ಗೆ ಕಾಲ್ ಮಾಡಿ ಅಥವಾ 8147500500 ಮೋಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಸಂದೇಶ ಕಳುಹಿಸಿ ನೋಂದಣಿ ಕುರಿತು ಮಾಹಿತಿ ಪಡೆಯಬಹುದಾಗಿದೆ.
ನಂತರ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಇನ್ನು ಎರಡನೇ ವಿಧಾನವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ಫಲಾನುಭವಿಗಳ ಮನೆಗೆ ಭೇಟಿ ನೀಡಲಿದ್ದು, ಅವರಿಂದಲೂ ಸಹ ಸ್ಥಳದಲ್ಲಿಯೇ ನೊಂದಾಯಿಸಿಕೊಳ್ಳಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೆ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ದಾಖಲೆ ಯಾವುದೆಲ್ಲ ಬೇಕು
ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಫಲಾನುಭವಿ ಮತ್ತು ಪತಿಯ ಆಧಾರ ಕಾರ್ಡ ಸಂಖ್ಯೆ, ಬ್ಯಾಂಕ್ ಖಾತೆ ಪಾಸ್ ಬುಕ್ (ಆಧಾರ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ, ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿದ್ದು, ನೋಂದಣಿ ಕೇಂದ್ರಕ್ಕೆ ಈ ಎಲ್ಲಾ ಮಾಹಿತಿಗಳೊಂದಿಗೆ ಹಾಜರಾಗುವುದು.
2000 ರೂ. ಖಚಿತ:
ಗ್ರಾಮ-ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಸ್ಥಳದಲ್ಲಿಯೇ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಿಸಲಾಗುತ್ತದೆ. ಇದಲ್ಲದೆ ನೋಂದಣಿ ನಂತರ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಮಂಜೂರಾತಿ ಬಗ್ಗೆ ಸಂದೇಶ ಸಹ ಬರಲಿದೆ. ನೋಂದಣಿ ನಂತರ ಆಧಾರ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಡಿ.ಬಿ.ಟಿ. ಮತ್ತು ಆಧಾರ್ ಜೋಡಣೆಯಾಗದ ಬ್ಯಾಮಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಮಾಹೆಯಾನ 2,000 ರೂ. ಗಳನ್ನು ಜಮೆ ಮಾಡಲಾಗುತ್ತದೆ.