ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.
ಬೆಳಗಾವಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಜಿಲ್ಲೆಗಳಲ್ಲಿನ 10 ಕ್ಕೂ ಹೆಚ್ಚು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಾಲೆಗಳಿಗೆ ಜುಲೈ 22 ರ ಇಂದು ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ 16 ಸೇತುವೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಭಾರೀ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧಗಂಗಾ, ಘಟಪ್ರಭಾ, ಮಲಪ್ರಭಾ,ಮಾರ್ಕೆಂಡೇಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಕಲಬರುಗಿ ಜಿಲ್ಲೆಯ ಕಾಗಿಣಾ, ಕಮಲಾವತಿ, ಮುಲ್ಲಾಮಾರಿ, ಅಮರ್ಜಾ ನದಿಗಳಿಗೆ ಪ್ರವಾಹ ಬಂದಿದ್ದು, ಕಲಬುರಗಿ-ಸೇಡಂ, ಕಲಬುರಗಿ-ಚಿತ್ತಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ.