ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಜರುಗಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಣ ಪಡೆದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ನಿನ್ನೆಯಿಂದ ನನಗೆ ಮೂರು ದೂರುಗಳು ಬಂದಿವೆ. ಯಾರಾದರೂ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಂಫೂರ್ಣ ಉಚಿತವಾಗಿದ್ದು, ಹಣ ವಸೂಲಿ ಮಾಡಿದವರ ಲಾಗಿನ್ ಐಡಿ, ಪಾಸ್ವರ್ಡ್ ರದ್ದು ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.