ಕಲಬುರಗಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಹಂತ ಹಂತವಾಗಿ ಈಡೇರಿಸುತ್ತಿದೆ. ಆಗಸ್ಟ್ ಮೊದಲ ವಾರ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೇಡಂನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾರ ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ರಾಜ್ಯಮಟ್ಟದ ಬೃಹತ್ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಹಲವರು ಭಾಗವಹಿಸಲಿದ್ದು, ಸಿಎಂ ಸೇರಿ ಇತರೆ ಗಣ್ಯರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.
ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ ಸಚಿವರು, ರಾಜ್ಯದ ಪ್ರತಿ ಮನೆ ಯಜಮಾನಿಗೆ ಮಾಸಿಕ 2,000 ರೂ. ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 15 ರಂದು ಚಾಲನೆ ನೀಡಲಾಗುವುದು. ಈ ಆಗಸ್ಟ್ 14 ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು. ಎಪಿಎಲ್, ಬಿಪಿಎಲ್ ಕಾರ್ಡ್ ದಾರರು ಎಂಬ ಭೇದವಿಲ್ಲದೆ ಯಜಮಾನಿ ಎಂದು ನಮೂದಿಸಿದ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಆದಾಯ ತೆರಿಗೆ ಪಾವತಿಸುವವರಿಗೆ ಯೋಜನೆ ಅನ್ವಯವಾಗುವುದಿಲ್ಲ. ಜುಲೈ ತಿಂಗಳಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಮಾಹಿತಿ ನೀಡಿದ್ದಾರೆ.