ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಠಾತ್ ಪ್ರವಾಹ ಸಂಭವಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ, ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಪರಿಸ್ಥಿತಿ ಅವಲೋಕಿಸುವ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ಮಧ್ಯೆ ಆಯಾ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ಆದೇಶವನ್ನು ವಿದ್ಯಾರ್ಥಿಗಳು, ಪೋಷಕರು ಪಾಲಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ, ಪ್ರವಾಹ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಲಪಾತ, ಅಪಾಯದ ಸ್ಥಳಗಳಿಗೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.