ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ನಗರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಬೆಂಗಳೂರಿನ ಶಾಸಕರು ಸಿಎಂಗೆ ಮನವಿ ಮಾಡಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
“ಬಿಬಿಎಂಪಿ ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆಯಿದೆ, ಆದ್ದರಿಂದ ನಗರಕ್ಕೆ ಸಂಬಂಧಿಸಿದ ಬಾಕಿ ಇರುವ ಯೋಜನೆಗಳನ್ನು ತೆರವುಗೊಳಿಸುವಂತೆ ನಾವು ಸಿಎಂಗೆ ಕೇಳಿದ್ದೇವೆ. ಕುಡಿಯುವ ನೀರು ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತು ಚರ್ಚಿಸಿದ್ದೇವೆ’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ಬಿಬಿಎಂಪಿ ಗುತ್ತಿಗೆದಾರರ ಸಮಸ್ಯೆ ಬಗ್ಗೆ ಕೇಳಿದಾಗ, ಎಸ್ಐಟಿ ಶೀಘ್ರದಲ್ಲೇ ವರದಿ ಸಲ್ಲಿಸಲಿದೆ ಎಂದು ಸಚಿವರು ಹೇಳಿದರು.
ಬಿಬಿಎಂಪಿ ಕಾಮಗಾರಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ಎಸ್ಐಟಿ ರಚಿಸಿತ್ತು. 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ತಿಳಿಸಲಾಗಿದ್ದು, ಈಗಾಗಲೇ 10 ದಿನಗಳು ಕಳೆದಿವೆ ಮತ್ತು ಮುಂದಿನ 20 ದಿನಗಳಲ್ಲಿ ನಾವು ವರದಿಯನ್ನು ಪಡೆಯುತ್ತೇವೆ. ವರದಿ ಸಲ್ಲಿಕೆಯಾದ ಬಳಿಕ ಪ್ರಾಮಾಣಿಕವಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಹಣ ಸಿಗಲಿದೆ’ ಎಂದು ರೆಡ್ಡಿ ಹೇಳಿದರು.ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನಾಲ್ಕು ತಂಡಗಳನ್ನು ರಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಕಾಮಗಾರಿಗಳನ್ನು ಮಾಡಲಾಗಿದೆ.ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಕಾಮಗಾರಿ ಸ್ಥಗಿತಗೊಳಿಸಿದೆ. ಕೆಲವು ಸಚಿವರ ವಿರುದ್ಧ ಮತ್ತು ಪ್ರದೇಶಾಭಿವೃದ್ಧಿ ನಿಧಿಯ ಕೊರತೆಯ ಬಗ್ಗೆ ಹಲವಾರು ಶಾಸಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಸಮಯದಲ್ಲಿ ಬೆಂಗಳೂರಿನ ಸಚಿವರು, ಶಾಸಕರು ಮತ್ತು ಸಂಸದರೊಂದಿಗೆ ಸಿಎಂ ಸಭೆ ನಡೆಸಿದ್ದಾರೆ.