ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ 12 ಗಂಟೆ ಒಳಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯಿಂದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಿಗೆ 1.88 ಲಕ್ಷ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 52,321 ಹುದ್ದೆಗಳು ಖಾಲಿ ಇವೆ. ಇದರಲ್ಲಿ 43,245 ಸಹ ಶಿಕ್ಷಕರ ಹುದ್ದೆಗಳು ಸೇರಿದ್ದು, ಮೊದಲ ಹಂತದಲ್ಲಿ 26,970 ಹುದ್ದೆಗಳನ್ನು ಅತಿಥಿ ಶಿಕ್ಷಕರ ಮೂಲಕ ಭರ್ತಿ ಮಾಡಲಾಗಿದೆ. ಮತ್ತೆ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ಹೇಳಲಾಗಿದೆ.