ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಜೋರಾಗಿದೆ. ಅಥಣಿ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಹೋರಾಟಕ್ಕೆ ಸಿದ್ಧತೆಗಳು ನಡೆದಿದ್ದು, ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಅಥಣಿ ಪಟ್ಟಣದ ಮೋಟಗಿ ಮಠದ ಪ್ರಭುಚೆನ್ನಬಸವ ಸ್ವಾಮೀಜಿ, ಗಚ್ಚಿನ ಮಠದ ಶಿವಬಸವಶ್ರೀ, ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ಸಭೆ ನಡೆಯಲಿದೆ.
ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಬೆಳಗಾವಿ ಜಿಲ್ಲೆಯನ್ನು ಗೋಕಾಕ್, ಚಿಕ್ಕೋಡಿ ಜಿಲ್ಲೆಗಳಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಥಣಿಯನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಇದೇ ನಿಟ್ಟಿನಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.