ಬೆಂಗಳೂರು : ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ ಎಂದು ಕಾಂಗ್ರೆಸ್ ಟೀಕೆಗೆ ಬಿಜೆಪಿ (BJP) ತಿರುಗೇಟು ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಿದ್ದು ಚಂದ್ರಯಾನದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೇ ಹೊರತು ಪಕ್ಷದ ಸಭೆಗಲ್ಲ. ಆದಾಗ್ಯೂ ನಮ್ಮ ಪಕ್ಷದ ಪ್ರಮುಖರು ಜನಸಾಮಾನ್ಯರಂತೆ ನಿಂತು ಅವರ ಸಂತಸದಲ್ಲಿ ಪಾಲ್ಗೊಂಡು ಅವರೊಡನೆ ತಮ್ಮ ಅಭಿಮಾನ ಪ್ರದರ್ಶಿಸಿರುವುದರಲ್ಲಿ ಹುಳುಕು ಹುಡುಕಲೆತ್ನಿಸಿರುವ ನಿಮಗೆ ಕಾಮಾಲೆಯಂತೆ ಏನೋ ಕಾಯಿಲೆ ಇರಬಹುದು ಎಂದು ಬಿಜೆಪಿ ಕುಟುಕಿದೆ.
ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ ಎಂಬಂತೆ ಗಾಂಧಿ ಕುಟುಂಬದ ಜೀತಕ್ಕೆ ಬಿದ್ದವರಂತೆ ಸೇವೆ ಮಾಡುವ ಕಾಂಗ್ರೆಸ್ಸಿಗರಿಗೆ ಪ್ರಧಾನಮಂತ್ರಿಗಳ ಅಧಿಕೃತ ಸರಕಾರಿ ಭೇಟಿಗೂ, ಅನೌಪಚಾರಿಕ ಭೇಟಿಗೂ ವ್ಯತ್ಯಾಸ ತಿಳಿದಿಲ್ಲ. ತಮ್ಮ ಮೋಜಿಗಾಗಿ ಲಕ್ಷದ್ವೀಪಕ್ಕೆ ತೆರಳಲು ಸೇನಾ ನೌಕೆ ಬಳಸುತ್ತಿದ್ದವರು ಬಿಟ್ಟು ಹೋದ ಸಂಸ್ಕಾರದಲ್ಲಿ ಬೆಳೆದವರಿಗೆ ಇವು ಅರ್ಥ ಆಗದು. ಅಂದಹಾಗೆ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ‘ಗಾಂಧಿ’ ಕುಟುಂಬ ಕೊಟ್ಟಿರುವ ಮರ್ಯಾದೆಯನ್ನು ಕರ್ನಾಟಕ ನೋಡಿದೆ ಎಂದು ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು ನೀಡಿದೆ.