ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ ಮೈಸೂರಿನಲ್ಲಿ ರಾಜ್ಯ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ನಾಳೆ ಐದು ಜಿಲ್ಲೆಯ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರಾಹುಲ್ ಗಾಂಧಿ ದೆಹಲಿಯಿಂದ ಬುಧವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ಅಲ್ಲಿಂದ ಮೈಸೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.