ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಆಗಸ್ಟ್ 11ರಂದು ಬಿಬಿಎಂಪಿಯ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ವೇಳೆ 10 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರವಾಗಿದ್ದು, ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಕುಮಾರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಆಪರೇಟರ್ ಜ್ಯೋತಿ ಎಂಬ ಮಹಿಳೆ ಸ್ಥಿತಿಯೂ ಗಂಭೀರವಾಗಿದೆಯಾದರೂ ಅವರ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡಿದೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಕ್ರಿಟಿಕಲ್ ಆಗಿದ್ದು, ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಶೀಘ್ರವೇ ಅವರ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.