ಮೈಸೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಮೈಸೂರಿನ ಮಹಾರಾಜ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತವಾಗಿ ಚಾಲನೆ ನೀಡದ್ದಾರೆ. ಈ ಮೂಲಕ ಇಂದು ರಾಜ್ಯದ 1.10 ಕೋಟಿ ಮಹಿಳೆಯ ಖಾತೆಗೆ 2,000 ರೂ. ವರ್ಗಾವಣೆ ಮಾಡಲಾಗಿದೆ.ಈ ಮೂಲಕ ಕಾಂಗ್ರೆಸ್ ಸರ್ಕಾರ ಕೊಟ್ಟಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು
ಶಕ್ತಿ ಯೋಜನೆ
ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯು ಜೂನ್, 11 ರಂದು ಪ್ರಥಮ ಯೋಜನೆಯಾಗಿ ಜಾರಿಗೊಂಡಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿರುವುದು ವಿಶೇಷವಾಗಿದೆ. ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 27 ರವರೆಗೆ 11,10,983 ಮಂದಿ ಮಹಿಳೆಯರು ಬಸ್ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚವನ್ನು ಸರ್ಕಾರ ಭರಿಸಿದೆ.
ಅನ್ನಭಾಗ್ಯ ಯೋಜನೆ
ಸರ್ಕಾರ ಬಿಪಿಎಲ್, ಎಎವೈ ಫಲಾನುಭವಿಗಳಿಗೆ ಈಗಾಗಲೆ ವಿತರಿಸುತ್ತಿರುವ 05 ಕೆ.ಜಿ ಅಕ್ಕಿಯೊಂದಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲು ಉದ್ದೇಶಿಸಿತ್ತು, ಆದರೆ ಅಕ್ಕಿಯ ಕೊರತೆ ಇರುವ ಕಾರಣ ಹೆಚ್ಚುವರಿ 05 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ 34 ರೂ. ನಂತೆ ಪ್ರತೀ ಫಲಾನುಭವಿಗೆ ಮಾಹೆಗೆ 170 ರೂ ನಂತೆ ಡಿ.ಬಿ.ಟಿ ಮೂಲಕ ಫಲಾನುಭವಿಗಳಿಗೆ ಜುಲೈ ತಿಂಗಳಲ್ಲಿ 4.24 ಕೋಟಿ ರೂ. ನಗದನ್ನು ವರ್ಗಾವಣೆ ಮಾಡಲಾಗಿದೆ. ಆಗಸ್ಟ್ ತಿಂಗಳಲ್ಲಿನ ನಗದು ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಗೃಹಜ್ಯೋತಿ
ಪ್ರತೀ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕಲ್ಪಿಸುವ ‘ಗೃಹಜ್ಯೋತಿ’ ಯೋಜನೆ ಇದೇ ಆಗಸ್ಟ್, 05 ರಂದು ಚಾಲನೆಗೊಂಡಿದೆ. ಸರ್ವರನ್ನು ಒಳಗೊಂಡ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಪರ ಅಭಿವೃದ್ಧಿ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ನುಡಿದಂತೆ ನಡೆಯುತ್ತಿರುವುದು ವಿಶೇಷವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1.30 ಲಕ್ಷ ಕ್ಕೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಗೆ ಹೆಸರು ನೋಂದಾಯಿಸಿದ್ದು, ಈ ಯೋಜನೆಯಡಿ ರೂ 3 ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ಭರಿಸಿದೆ.
ಗೃಹಲಕ್ಷ್ಮಿಯೋಜನೆ
ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮಿ’ ಯೋಜನೆ ಇದೇ ಆಗಸ್ಟ್ 30 ರಿಂದ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲಿದೆ.