ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಶಿಕ್ಷಕರ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮಂಡಳಿಯ ಅಧ್ಯಕ್ಷ ಡಾ. ಅಜಯ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ 19,000 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಎಲ್ಲಾ ಹುದ್ದೆಗಳನ್ನು ಒಂದೂವರೆ ತಿಂಗಳಲ್ಲೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಾಯಂ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡುವುದು ಬಾಕಿ ಇದ್ದು, ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. ಸುಮಾರು 3200 ಶಿಕ್ಷಕರ ಹುದ್ದೆಗಳು ಖಾಲಿ ಉಳಿಯಲಿದ್ದು, ಎರಡು ತಿಂಗಳೊಳಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಯಾವ ಶಾಲೆಗಳಲ್ಲಿಯೂ ಶಿಕ್ಷಕರ ಕೊರತೆ ಖಾಲಿ ಇರದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಶಾಲೆಗಳ ದುರಸ್ತಿ, ಹೊಸ ಕಟ್ಟಡ ನಿರ್ಮಾಣ, ಆಟದ ಮೈದಾನ, ಶೌಚಾಲಯ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.