ಶಿವಮೊಗ್ಗ : ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದ ಏರ್ ಪೋರ್ಟ್ ನಲ್ಲಿ ಮಾತನಾಡಿದ ಯಡಿಯೂರಪ್ಪ ಜಿಲ್ಲೆಯ ಬಹು ವರ್ಷಗಳ ವಿಮಾನ ನಿಲ್ದಾಣದ ಕನಸು ನಿಮ್ಮೆಲ್ಲರ ಬೆಂಬಲದಿಂದ ನನಸಾಗಿದೆ. ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಉತ್ತಮ ಅವಕಾಶಗಳು ತೆರೆದುಕೊಳ್ಳಲಿವೆ. ನಿಲ್ದಾಣದಲ್ಲಿ ರಾತ್ರಿ ನಿಲ್ದಾಣಕ್ಕೂ ವ್ಯವಸ್ಥೆ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಈ ನಿಲ್ದಾಣ ಅಂತರಾಷ್ಟ್ರೀಯ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ ಪಾಟೀಲ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ, ಸಂಸದದಾದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ವಿಮಾನಯಾನದ ಹೊಸ ಅಧ್ಯಾಯ ಆರಂಭವಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.
ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ.ಪಾಟೀಲ ಜತೆ ಸಚಿವ ಮಧು ಬಂಗಾರಪ್ಪ ಕೂಡ ಪ್ರಯಾಣಿಸಿದರು.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಪರವಾಗಿ ಇಬ್ಬರು ರೈತರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಮಾಜಿ ಶಾಸಕರಾದ ಕೆ.ಎಸ್.ಈಶ್ವರಪ್ಪ, ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ ಆರ್ ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾ.ಶಮಂತ್, ಡಿಎಸ್ಪಿ ಚಂದ್ರಶೇಖರ್ ಉಪಸ್ಥಿತರಿದ್ದರು.