ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ನಾಯಕನಿಲ್ಲದಂತಾಗಿರುವ ರಾಜ್ಯ ಬಿಜೆಪಿಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಧೈರ್ಯ ತುಂಬಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕರು, ಸಂಸದರು, ಪದಾಧಿಕಾರಿಗಳ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಆಪರೇಷನ್ ಹಸ್ತ, ಲೋಕಸಭಾ ಚುನಾವಣೆ, ಪಕ್ಷ ಸಂಘಟನೆ, ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ.
ಈ ವೇಳೆ ಕೆಲ ನಾಯಕರು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್, ಬಿಜೆಪಿ ನಾಯಕರನ್ನು ಸೆಳೆಯುತ್ತಿರುವ ವಿಚಾರವಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ಎಲ್.ಸಂತೋಷ್, ಆಪರೇಷನ್ ಹಸ್ತದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಪಕ್ಷ ಬಿಟ್ಟು ಹೋಗುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಹತ್ತು ಜನ ಹೋದರು ಅದಕ್ಕೆ ಸಮಾನಾದ ಒಬ್ಬರನ್ನು ಕರೆತರಬಹುದು. ನಮ್ಮ ಸಂಪರ್ಕದಲ್ಲಿಯೂ ಕಾಂಗ್ರೆಸ್ ನ 40-45 ಶಾಸಕರಿದ್ದಾರೆ. ವರಿಷ್ಠರು ಒಪ್ಪಿಗೆ ನೀಡಿದರೆ ನಾಳೆಯೇ ಒಂದು ದಿನದ ಕೆಲಸ. ಆದರೆ ಈಗ ನಮಗೆ ಅದರ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸ್ಥಿತಿ ಏನಾಗಲಿದೆ ಎಂಬುದನ್ನು ಕಾದು ನೋಡಿ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿದೆ ನಿಜ. ಈ ಬಗ್ಗೆ ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಕೆಲಸ ಮಾಡಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಪಕ್ಷ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.