ಬೆಂಗಳೂರು: ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಹೊಸ ನೀತಿ ಜಾರಿಗೆ ತರುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಹೊಸ ಪರಿಸರ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.
ಪರಿಸರ ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ವಿಫಲ ಅವಕಾಶಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಈ ನಿಟ್ಟಿನಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಯಾವ ಪ್ರದೇಶ ಮತ್ತು ಸ್ಥಳಗಳಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬಹುದು ಎಂಬುದನ್ನು ಪಟ್ಟಿ ಮಾಡಿ ಕರಡು ನೀತಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನು ಕೂಡ ಪರಿಸರ ಪ್ರವಾಸೋದ್ಯಮದ ಭಾಗವಾಗಿಸುವ ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದ್ದಾರೆ.