ಬೆಂಗಳೂರು: ಇಲಾಖಾ ವಿಚಾರಣೆಯಲ್ಲಿ ಕಾಲಮಿತಿ ಕಡ್ಡಾಯ ಪಾಲನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಪಿಡಿಒ, ಗ್ರಾಪಂ ಕಾರ್ಯದರ್ಶಿಗಳು, ಸಿಬ್ಬಂದಿ ವಿರುದ್ಧದ ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕಾಲಮಿತಿ ಪಾಲಿಸಲು ಸೂಚಿಸಲಾಗಿದೆ.
ಇಲಾಖಾ ವಿಚಾರಣೆಗಳು ವಿಳಂಬವಾಗುವುದರಿಂದ ಮುಂಬಡ್ತಿ, ಕಾಲಮಿತಿ ವೇತನ ಬಡ್ತಿ, ಇತರೆ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದೆ. ಹೀಗಾಗಿ 9 ತಿಂಗಳ ಕಾಲ ಮಿತಿ ಪಾಲಿಸಬೇಕು ಎಂದು ರಾಜ್ಯ ಪಿಡಿಒ ಕ್ಷೇಮಾಭಿವೃದ್ಧಿ ಸಂಘದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಲಾಗಿತ್ತು. ಹಿರಿಯ ಅಧಿಕಾರಿಗಳಿಗೂ ಕೂಡ ಮನವಿ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದ್ದು, ಪಿಡಿಒ, ಗ್ರಾಪಂ ಕಾರ್ಯದರ್ಶಿಗಳು, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲು ನಿಗದಿಪಡಿಸಲದ ಕಾಲಮಿತಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಲಾಗಿದೆ. ಲೋಕಾಯುಕ್ತ ಇಲಾಖಾ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ ಪ್ರಕರಣಗಳಲ್ಲಿ ಸೂಚನೆಗಳನ್ನು ಪಾಲಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಲಾಗಿದೆ.