ಬೆಂಗಳೂರು : ‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ವಿಚಾರ ಕೇಳಿ ನನಗೆ ಶಾಕ್ ಆಯ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್ ಮಾಡಿತ್ತು. ಬಳಿಕ 5-10 ನಿಮಿಷಗಳ ಬಳಿಕ ಟ್ವೀಟ್ ಡಿಲೀಟ್ ಮಾಡಲಾಗಿತ್ತು. ಈ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
‘ಈ ಬಗ್ಗೆ ಇಲಾಖೆ ಕಾರ್ಯದರ್ಶಿ, ನಿರ್ದೇಶಕರನ್ನು ಕರೆದು ಮಾತನಾಡಿದೆ. ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಈ ಟ್ವೀಟ್ ಆಗಿದೆ ಎಂಬುದು ಗೊತ್ತಾಯಿತು. ಈ ವಿಚಾರವನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಟ್ವೀಟ್ ಸಂಬಂಧ ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ. 4-5 ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಹಣ ಎಲ್ಲರಿಗೂ ವರ್ಗಾವಣೆ ಆಗಲಿದೆ ಎಂದು ಸ್ಪಷ್ಟನೆ ನೀಡಿದರು.
ಏನಿದು ಟ್ವೀಟ್
ಈ ಬಗ್ಗೆ ಬೆಳಗ್ಗೆ ಟ್ವೀಟ್ ಮಾಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ‘ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ’ ಎಂದು ಟ್ವೀಟ್ ಮಾಡಿತ್ತು. ಬಳಿಕ ಐದು ಹತ್ತು ನಿಮಿಷದಲ್ಲಿ ಈ ಟ್ವೀಟ್ ಡಿಲೀಟ್ ಮಾಡಲಾಗಿತ್ತು.