ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಸ್ಥಗಿತ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.
ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.s
ಈ ಬಗ್ಗೆ ಟ್ವೀಟ್ ಮಾಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ಹೇಳಿತ್ತು. ನಂತರ ಟ್ವೀಟ್ ಡಿಲೀಟ್ ಮಾಡಲಾಗಿತ್ತು. ಈ ಹಿನ್ನೆಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.