ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒನ್ ಮತ್ತು ಸಿದ್ದರಾಮಯ್ಯ ಟು ನಡುವೆ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. 2013 ರಿಂದ 18ರವರೆಗೆ ಸಿದ್ದರಾಮಯ್ಯ 1.0 ಮತ್ತು 2023ರ ಸಿದ್ದರಾಮಯ್ಯ 2.0 ಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಭ್ರಷ್ಟಾಚಾರ ಸಿಎಂ ಮೂಗಿನ ನೇರಕ್ಕೆ ನಡೆದರೂ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ. ಹಾಗಾಗಿ ಬರಗಾಲ ಘೋಷಣೆ ಮಾಡಿಲ್ಲ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹಣಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎನ್ನುವುದು ಸರ್ಕಾರದ ನೀತಿಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಮಹದಾಯಿ ವಿಚಾರದಲ್ಲಿ ಕೇಂದ್ರಕ್ಕೆ ಆಸಕ್ತಿ ಇಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಟ್ರಿಬ್ಯುನಲ್ ಮಾಡಿ ಎಂದು ಅಫಿಡವಿಟ್ ಕೊಟ್ಟಿದ್ದರು. ಅದರ ಬಗ್ಗೆ ಯಾಕೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸುವ ಕುರಿತು ಚರ್ಚೆ ನಡೆಸಿದ್ದು, ಬೂತ್ ಮಟ್ಟದಿಂದ ಪಕ್ಷ ಸಂಘಟಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಸಂಪೂರ್ಣ ನಿಂತು ಹೋಗಿದೆ. ಬಿಜೆಪಿ ಶಾಸಕರ ಕ್ಷೇತ್ರಗಳ ಬಗ್ಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.