ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಸಭೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ, ವಿಸರ್ಜನೆ ಕಟ್ಟು ನಿಟ್ಟಾಗಿ ನಿಷೇಧಿಸಬೇಕು. ಅಂತಹ ಮೂರ್ತಿಗಳನ್ನು ತಯಾರಿಸುವುದು ಕಂಡು ಬಂದರೆ ತಯಾರಿಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಜಲ ಮೂಲಗಳಿಗೆ ಹಾನಿ ಮಾಡುವ ಭಾರ ಲೋಹ ಮತ್ತು ರಾಸಾಯನಿಕ ಬಣ್ಣ ಬಳಕೆಯ ಪಿಓಪಿ ವಿಗ್ರಹಗಳ ತಯಾರಿಕೆ, ದಾಸ್ತಾನು, ಮಾರಾಟ, ವಿಸರ್ಜನೆ ತಡೆಯಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಅದರ ಅನ್ವಯ ಪಿಓಪಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಈ ಬಗ್ಗೆ ಸೂಚನೆ ನೀಡಿ ಮಾರಾಟ ನಿರ್ಬಂಧಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.