ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು.
ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರಿಲ್ಲ. ಕುಡಿಯಲು ಮತ್ತು ನೀರಾವರಿ ಉದ್ದೇಶಕ್ಕಾಗಿ ನಮಗೆ 106 ಟಿಎಂಸಿ ನೀರು ಬೇಕು ಆದರೆ ನಮ್ಮಲ್ಲಿ ಕೇವಲ 53 ಟಿಎಂಸಿ ಮಾತ್ರ ಇದೆ. ಕಳೆದ 123 ವರ್ಷಗಳಲ್ಲಿ ನಾವು ಇಂತಹ ಪರಿಸ್ಥಿತಿಯನ್ನು ಎದುರಿಸಿಲ್ಲ. ನಾವು ಇಂದೇ ಕಾನೂನು ತಂಡದೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ನೆಲ, ಜಲ, ಭಾಷೆ ವಿಚಾರದಲ್ಲಿ ನಾವು ಯಾರೂ ಕೂಡ ರಾಜಕೀಯ ಮಾಡಿಲ್ಲ. ಸಮಿತಿಯ ಮುಂದೆ ಮತ್ತೊಂದು ಅರ್ಜಿ ಹಾಕುತ್ತೇವೆ. ಸುಪ್ರೀಂಕೋರ್ಟ್ಗೆ ವಾಸ್ತವಾಂಶ ತಿಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದ ನಿಯೋಗವು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದೆ ಎಂದು ಸಿಎಂ ಹೇಳಿದರು.”ವಾಸ್ತವದ ಬಗ್ಗೆ ತಿಳಿಸಲು ಸಮಯ ಕೋರಿ ನಾವು ಮತ್ತೆ ಪ್ರಧಾನಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆಯುತ್ತೇವೆ. ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ” ಎಂದು ಸಿಎಂ ಹೇಳಿದರು.
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸರ್ವಪಕ್ಷ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಹಾಜರಾಗಿರಲಿಲ್ಲ.