ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದು, ಇದಕ್ಕೆ ಬಿಜೆಪಿ ಉನ್ನತ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ಸಿಕ್ಕಿದೆ. ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ ಹಾಸನ, ಮಂಡ್ಯ ಸೇರಿದಂತೆ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಜೆಪಿ ಬಿಟ್ಟು ಕೊಡಲಿದೆ ಎನ್ನಲಾಗಿದೆ.
ಇದರ ಮಧ್ಯೆ ಈ ಮೈತ್ರಿಗೆ ಜೆಡಿಎಸ್ ನ ಕೆಲ ಹಾಲಿ, ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಮೈತ್ರಿ ಮಾಡಿಕೊಂಡರೆ ನಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕೆ ತೊಡಕುಂಟಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಬಿಜೆಪಿಯ ಮಾಜಿ ಶಾಸಕರುಗಳಿಂದಲೂ ಈ ಮೈತ್ರಿ ಕುರಿತು ಅಪಸ್ವರ ಕೇಳಿ ಬಂದಿದೆ.
ಇದರ ಮಧ್ಯೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್, ಈ ಮೈತ್ರಿ ಕುರಿತು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಶನಿವಾರದಂದು ತಮ್ಮ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪಕ್ಷ ತೊರೆಯುವ ಪರೋಕ್ಷ ಸುಳಿವನ್ನು ನೀಡಿದ್ದಾರೆ.