ಬೆಂಗಳೂರು: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಅಧಿಕೃತವಾಗಿದೆ. ದೆಹಲಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಎನ್.ಡಿ.ಎ. ಜೊತೆ ಜೆಡಿಎಸ್ ಮೈತ್ರಿ ಅಧಿಕೃತವಾಗುತ್ತಿದ್ದಂತೆ ಜೆಡಿಎಸ್ ಪಕ್ಷದ ಕೆಲವು ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ನಾಸಿರ್ ಹುಸೇನ್, ಯುವ ಘಟಕದ ಕಾರ್ಯಾಧ್ಯಕ್ಷ ಎನ್.ಎಂ. ನೂರ್, ಮುಖಂಡ ಮೋಹಿತ್ ಅಲ್ತಾಫ್ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಅಧಿಕೃತವಾಗುತ್ತಿದ್ದಂತೆ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ನಾಯಕರು ಸಭೆ ನಡೆಸಿ ಮೈತ್ರಿ ವಿರೋಧಿಸಿದ್ದಾರೆ. ಸೈಯದ್ ಶಫಿವುಲ್ಲಾ ರಾಜೀನಾಮೆ ನೀಡಿದ್ದು, ಉಳಿದವರು ಕೂಡ ಶೀಘ್ರವೇ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.