ಬೆಂಗಳೂರು: ಕುಂಚಿಟಿಗ ಜಾತಿಯನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿ -ಒಬಿಸಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಂಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತುಮಕೂರು, ಚಿತ್ರದುರ್ಗ ಮೊದಲಾದ ಜಿಲ್ಲೆಗಳಲ್ಲಿ ಬಹುಸಂಖ್ಯಾತ ಕುಂಚಿಟಿಗ ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದನೆ ಸಿಕ್ಕಂತಾಗಿದೆ.
ಸಂಪುಟ ಸಭೆಯ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 3(ಎ) ಅಡಿಯಲ್ಲಿ ಸೇರಿರುವ ಕುಂಚಿಟಿಗ ಸಮುದಾಯದ ಬಗ್ಗೆ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ಮೈಸೂರು ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿ ಆಧರಿಸಿ ಕೇಂದ್ರ ಸರ್ಕಾರಕ್ಕೆ ಕುಂಚಿಟಿಗ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.