ಬೆಂಗಳೂರು : ದೆಹಲಿಯಿಂದ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ನೇರವಾಗಿ ‘ಕಾವೇರಿ’ ಹೋರಾಟಕ್ಕೆ ಧುಮುಕಿದ್ದಾರೆ. ಹೌದು, ಕಾವೇರಿ ನೀರಿಗಾಗಿ ಹೋರಾಡಲು ಮಂಡ್ಯದ ರೈತರಿಗೆ ಸಾಥ್ ನೀಡಲು ಹೆಚ್ಡಿಕೆ ಸಜ್ಜಾಗಿದ್ದಾರೆ.
ರೈತರ ‘ಕಾವೇರಿ’ ಹೋರಾಟಕ್ಕೆ ಬೆಂಬಲ ನೀಡಲು ಮಂಡ್ಯಕ್ಕೆ ಹೊರಟಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಕುಮಾರಸ್ವಾಮಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು .ನಾನು ಈಗ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದರು.
ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ.ನಾಡಿನ ಜನತೆ ಹಿತರಕ್ಷಣೆ ದೃಷ್ಟಿಯಿಂದ ಕೆಲ ವಿಷಯಗಳು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ.ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.
ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ಸರ್ಕಾರ
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದುಸರಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ ಎಂದು ಹೆಚ್ಡಿಕೆ ಕಿಡಿಕಾರಿದರು.
ಕಾವೇರಿ ಜಲ ನಿಯಂತ್ರಣ ಸಮಿತಿ & ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ. ರಾಜ್ಯ ಸರಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ ಎಂದು ಹೆಚ್ಡಿಕೆ ಹೇಳಿದ್ದಾರೆ.
.