ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆಗೆ ಯತ್ನಿಸಿ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಸೇರಿದಂತೆ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯವು ತಮಿಳುನಾಡಿಗೆ ನೀರು ಹರಿಸುವ ಸಾಮರ್ಥ್ಯ ಹೊಂದಿಲ್ಲ, ಕೂಡಲೇ ಮೇಲ್ಮನವಿ ಸಲ್ಲಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರು, ಮಂಡ್ಯ, ಮದ್ದೂರು ಭಾಗದಲ್ಲಿ ಅನ್ನದಾತನ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರಕರ್ತರು ಧರಣಿ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಇದೇ ವೇಳೆ ತಮಿಳುನಾಡು ಸರ್ಕಾರದ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.