ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ.
5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು.
ಸಚಿವರ ಹೇಳಿಕೆ ವಿರೋಧಿಸಿ ಮತ್ತು ಬರ ಪೀಡಿತ ತಾಲೂಕುಗಳ ಪಟ್ಟಿಯಿಂದ ಹಾವೇರಿ ಜಿಲ್ಲೆಯ ಮೂರು ತಾಲೂಕುಗಳನ್ನು ಕೈ ಬಿಟ್ಟಿರುವುದನ್ನು ಖಂಡಿಸಿ ಹಾವೇರಿಯಯಲ್ಲಿ ಸೋಮವಾರ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆ ವೇಳೆ ರೈತ ಸಂಘಟನೆಗಳು ಕ್ಷಮೆಗೆ ಪಟ್ಟು ಹಿಡಿದಿದ್ದರಿಂದ ಸಚಿವರು ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆ ನಾನು ನೀಡಿದ ಹೇಳಿಕೆಗೆ ವಿಷಾದಿಸುತ್ತೇನೆ. ನಿಮ್ಮ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ ಸಚಿವರು, ಶೀಘ್ರವೇ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮೂರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲು ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.