ಬೆಂಗಳೂರು: ಮುಂದಿನ 6 ತಿಂಗಳಲ್ಲಿ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೈಕೋರ್ಟ್ ಆದೇಶ ನೀಡಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಮುಂದಿನ ಆರು ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆ ಮತ್ತು ಸಂಸ್ಥೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕೆಂದು ಮಹತ್ವದ ತೀರ್ಪು ನೀಡಿದೆ.
ಬೆಂಗಳೂರಿನ ಪಟ್ಟಂದೂರು ಅಗ್ರಹಾರ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.
ಎಸ್ಸಿ, ಎಸ್ಟಿ ಪಂಗಡಗಳಿಗೆ ಮೀಸಲಾದ ಹುದ್ದೆಗಳನ್ನು ಭರ್ತಿ ಮಾಡಬೇಕು. ಈ ಹುದ್ದೆಗಳನ್ನು ಖಾಲಿ ಉಳಿಸಿಕೊಳ್ಳುವುದು ಸಂವಿಧಾನ ಈ ಸಮುದಾಯಗಳಿಗೆ ಕಲ್ಪಿಸಿದ ಸೌಲಭ್ಯ ನಿರಾಕರಿಸಿದಂತಾಗುತ್ತದೆ. ಹಾಗಾಗಿ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಮುಂದಿನ ಆರು ತಿಂಗಳ ಒಳಗೆ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಕೋರಿ ಮಂಜುನಾಥ್ ಪ್ರಸಾದ್ ಹೈಕೋರ್ಟ್ ಗೆ ತಕಾರರು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಂಬಂಧಿತ ಪ್ರಾಧಿಕಾರಗಳಿಗೆ ಮನವಿ ಮಾಡಬೇಕು ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತ್ತು, ಅರ್ಜಿದಾರರ ಮನವಿಗೆ ಯಾವುದೇ ಪರಿಹಾರ ಕಲ್ಪಿಸಿದ ಕಾರಣ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.