ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಬಗ್ಗೆ ಕಾಂಗ್ರೆಸ್ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿತ್ತು. ಘಟನೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿತ್ತು.
ಇದೀಗ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದೆ. ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಮುಂದಾಗಿದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ಬಗ್ಗೆ ಮೃತ ಆರೋಪಿಗಳ ಕುಟುಂಬದವರು ನಕಲಿ ಎನ್ ಕೌಂಟರ್ ಎಂದು ಪ್ರಶ್ನಿಸಿದ್ದರು. ಘಟನೆ ಖಂಡಿಸಿದ್ದ ವಿಪಕ್ಷ ಕಾಂಗ್ರೆಸ್ ಅಂದಿನ ಬಿಜೆಪಿ ಸರ್ಕಾರದ ಕೈವಾಡ ಎಂದು ಆರೋಪಿಸಿತ್ತು. ಪ್ರಕರಣದ ತನಿಖೆಗೆ ಮ್ಯಾಜಿಸ್ಟ್ರೇಟ್ ಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ ನಿಂದ ವರದಿ ಸಂಗ್ರಹಿಸಲಾಗಿದ್ದು, ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಗೋಲಿಬಾರ್ ಕ್ರಮ ಸರಿ ಇದೆ ಎಂದು ವರದಿ ನೀಡಿದ್ದರು.
ಅಂದು ಮ್ಯಾಜಿಸ್ಟ್ರೇಟ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಇಂದು ವರದಿಯನ್ನು ಅಂಗೀಕರಿಸಿದೆ.