ಬೆಂಗಳೂರು: ಬೆಂಬಲ ಬೆಲೆಗೆ ಒತ್ತಾಯಿಸಿ ತೆಂಗು ಬೆಳೆಗಾರರು ಹೋರಾಟಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜಭವನ ಚಲೋ ನಡೆಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.
ಕ್ವಿಂಟಾಲ್ ಕೊಬ್ಬರಿಗೆ ಕೇಂದ್ರ ಸರ್ಕಾರ 20,000 ರೂಪಾಯಿಗಳ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 5,000 ರೂಪಾಯಿ ಹೆಚ್ಚುವರಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ತೆಂಗು ಬೆಳೆಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಅಕ್ಟೋಬರ್ 3 ಮಂಗಳವಾರ ಕರ್ನಾಟಕ ರೈತ ಸಂಘದ ಸಹಕಾರದೊಂದಿಗೆ ತೆಂಗು ಬೆಳೆಗಾರರು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ,ಕಳೆದ 5-6 ವರ್ಷಗಳಿಂದ ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ 18,000 ರೂಪಾಯಿಗಳಿಂದ ಕೇವಲ 7 ಸಾವಿರ ರೂಪಾಯಿಗೆ ಕುಸಿದಿದೆ. ಇದರಿಂದ ರಾಜ್ಯದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ಆಮದು ಹಾಗೂ ರಫ್ತು ನೀತಿಯೇ ಬೆಲೆ ಕುಸಿತಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದ್ದಾರೆ.
ಇಂಡೋನೇಷ್ಯಾ, ಥೈಲ್ಯಾಂಡ್, ಮಲೇಷ್ಯಾದಿಂದ ತಾಳೆ ಎಣ್ಣೆ, ತೆಂಗಿನ ಎಣ್ಣೆ, ಬ್ರೆಜಿಲ್, ರಷ್ಯಾ, ಉಕ್ರೇನ್ ನಿಂದ ಸೋಯಾ ಎಣ್ಣೆಗಳನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ. ಇದರಿಂದಾಗಿ ಭಾರತದಲ್ಲಿ ತೆಂಗಿನ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದಾಗಿ ಭಾರತದಲ್ಲಿರುವ ರೈತರಿಗೆ ಅನ್ಯಾಯವಾಗುತ್ತಿದೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಲ್ಲಿನ ರೈತರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.