
ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನಟ ನಾಗಭೂಷಣ್ ಅವರ ಕಾರು ಅಪಘಾತದಲ್ಲಿ ಪ್ರೇಮಾ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ನಟನನ್ನು ಬಂಧಿಸಿದ್ದ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದರು. ನಾಗಭೂಷಣ್ ವಿರುದ್ಧ ಐಪಿಸಿ ಸೆಕ್ಷನ್ 279ರ ಅಡಿ ಕೇಸ್ ದಾಖಲಾಗಿದೆ. ಇದೀಗ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಸೆ.30ರಂದು ರಾತ್ರಿ ಕನಕಪುರ ರಸ್ತೆಯಲ್ಲಿ ನಟ ನಾಗಭೂಷಣ್ ಕಾರು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಆಕೆಯ ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.