ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಹಿರಿಯ ಶಾಸಕರೇ ಅಸಮಾಧಾನವನ್ನು ಹೊರಹಾಕುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಸರ್ಕಾರದಲ್ಲಿ ಅನ್ಯಾಯವಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಆರೋಪ ಮಾಡಿದ್ದ ಬೆನ್ನಲ್ಲೇ ಇದೀಗ ಮತ್ತೋರ್ವ ಹಿರಿಯ ಶಾಸಕ ರಾಜು ಕಾಗೆ ಕೂಡ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಉಗಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗವಾಡ ಶಾಸಕ ರಾಜು ಕಾಗೆ, ಹೆಸ್ಕಾಂ ಕಾರ್ಯವೈಖರಿ ಬಗ್ಗೆ ಪ್ರಸಾಪಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇದರಿಂದಾಗಿ ರೈತರಿಗೆ ಸಮಸ್ಯೆಯುಂಟಾಗುತ್ತಿದೆ. ವಿದ್ಯುತ್ ನಿಗಮಗಳಲ್ಲಿಯೇ ವೈಫಲ್ಯವಿದೆ. ಇದು ಸರ್ಕಾರದ ವೈಫಲ್ಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತಮ್ಮ ತಮ್ಮ ಜವಾಬ್ದಾರಿ ಸೂಕ್ತವಾಗಿ ನಿರ್ವಹಿಸಿದರೆ ಮಾತ್ರ ದೇಶ ಕಟ್ಟಲು ಸಾಧ್ಯ. ಆದರೆ ಶಾಸಕಾಂಗ, ಕಾರ್ಯಾಂಗ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.