ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಗೃಹ ಆರೋಗ್ಯ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ವಿಭಾಗದಲ್ಲಿ ಬೆಳಗಾವಿ, ಗದಗ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ಮುಂದಿನ ವರ್ಷ ಎಲ್ಲ ಜಿಲ್ಲೆಗಳಿಗೆ ಈ ಯೋಜನೆ ವಿಸ್ತರಿಸಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುತ್ತಿದೆ. ವೈದ್ಯರ ತಂಡ ಮನೆ ಮನೆಗೆ ಭೇಟಿ ನೀಡಿ ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧ ಒದಗಿಸಲಿದೆ ಎಂದು ಹೇಳಿದ್ದಾರೆ.