ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ.
ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಪಕ್ಷದ ವಿಚಾರಧಾರೆ ಮತ್ತು ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಿಗೆ ಬಿಂಬಿಸುವ ಉದ್ದೇಶದಿಂದ ಆಯನೂರು ಮಂಜುನಾಥ್ ಅವರಿಗೆ ಕೆಪಿಸಿಸಿ ವಕ್ತಾರ ಹುದ್ದೆಯ ಹೊಣೆಗಾರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆಯನೂರು ಮಂಜುನಾಥ್ ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಗೆ ಮೊದಲು ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಪರಾಭವಗೊಂಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅವರು ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಕೆಪಿಸಿಸಿ ವಕ್ತಾರ ಹುದ್ದೆ ನೀಡಲಾಗಿದೆ.