ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 ರ ಮೇ 31 ರವರೆಗೆ 7 ತಿಂಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು.
ಸಹಾಯಕ ಆಯುಕ್ತ ದೇವರಾಜ್ ಆರ್. ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಮೂರು ಸೇತುವೆ, ದೇವಿಮನೆ ಘಟ್ಟದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳುವುದರಿಂದ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
2020ರಲ್ಲಿ ಗುತ್ತಿಗೆ ಪಡೆದ ಕಂಪನಿ ಶಿರಸಿ -ಕುಮಟಾ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿತ್ತು. ನವೆಂಬರ್ 1ರಿಂದ 7 ತಿಂಗಳ ಕಾಲ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಹೇಳಲಾಗಿದೆ.