ಬೆಂಗಳೂರು : ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ವಂತ ನ್ಯಾಯ ಒದಗಿಸುವ ಹಾಗೂ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಸಂಬಂಧ ಪಟ್ಟಣಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದಲ್ಲೇ 100 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಗಿದೆ.
ಇಲ್ಲಿದೆ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೇಂದ್ರ ಬಸ್ ನಿಲ್ದಾಣವನ್ನು ರೂ.23 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.
ಧಾರವಾಡ ಹಳೆಯ ನಗರ ಸಾರಿಗೆ ಬಸ್ ನಿಲ್ದಾಣವನ್ನು ತೆರವುಗೊಳಿಸಿ ನೂತನ ಮಾದರಿಯ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ರೂ. 13 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ ರೂ. 2000 ಮಾಸಿಕ ಸಹಾಯಧನ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡಲು ಅನುಮೋದನೆ.
30 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಯಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎನ್.ಜಿ.ಟಿ ಪರಿಸರ ಪರಿಹಾರ ನಿಧಿಯಡಿ ಒಟ್ಟು 110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳನ್ನು ರೂ. 400 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
21 ಹೆಚ್ಚುವರಿ ಬರಪೀಡಿತ ತಾಲೂಕುಗಳೆಂದು ಘೋಷಿಸಲು ಅನುಮೋದನೆ.
ಅಕ್ಕಿ ಬದಲಿಗೆ ಹಣ ನೀಡುವ ವ್ಯವಸ್ಥೆಯನ್ನು ಮುಂದುವರೆಸಲು ನಿರ್ಣಯ.
ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ( ತಿದ್ದುಪಡಿ ) ವಿಧೇಯಕ -2023 ಕ್ಕೆ ಅನುಮೋದನೆ.
ರಾಜ್ಯದ 11 ಪೊಲೀಸ್ ತರಬೇತಿ ಶಾಲೆಗಳ ಮೂಲಸೌಕರ್ಯ ಮತ್ತು ಪುನರ್ ನಿರ್ಮಾಣ ಕಾಮಗಾರಿಗಳನ್ನು ರೂ.20 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ರಾಜ್ಯದಲ್ಲಿ ಸಮೃದ್ಧ ಹಸಿರು ಮತ್ತು ಸ್ವಚ್ಛ ಪರಿಸರವನ್ನು ತರಲು ನೈಸರ್ಗಿಕ ಅನಿಲದ ಬಳಕೆಯನ್ನು ಹೆಚ್ಚಿಸಲು ಅನಿಲ ಆಧಾರಿತ ಆರ್ಥಿಕತೆಯ ಅಭಿವೃದ್ಧಿಗಾಗಿ “ನಗರ ಅನಿಲ ವಿತರಣಾ ಜಾಲದ ಅಭಿವೃದ್ಧಿ ರಾಜ್ಯ ನೀತಿ’ಗೆ ಅನುಮೋದನೆ.
ಕೊಪ್ಪಳ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಪರಿಷ್ಕೃತ ರೂ. 192 ಕೋಟಿಗೆ ಅನುಮೋದನೆ.