ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ್ದಾರೆ.
ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಿದ್ದು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚಿತ್ರೀಕರಿಸಲು ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ.
ಕ್ರೀಡಾಪಟುಗಳಿಗೆ ಟ್ರ್ಯಾಕ್ ಸೂಟ್, ಟೀಶರ್ಟ್ ವಿತರಣೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಮೊದಲೇ ನೊಂದಣಿ ಮಾಡಿಸಿಕೊಂಡಿದ್ದರೂ ಟ್ರ್ಯಾಕ್ ಸೂಟ್ ಟೀ ಶರ್ಟ್ ಕೊಡದ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಬಂದಿದ್ದ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಚಿತ್ರಿಕರಿಸುವ ವೇಳೆ ಮಾಧ್ಯಮದವರ ಮೇಲೆ ಹರಿಹಾಯ್ದ ಷಡಕ್ಷರಿ ಸುದ್ದಿ ಮಾಡದಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕ್ಯಾಮರಾ ಮ್ಯಾನ್ ಮೇಲಿನ ಹಲ್ಲೆ ಖಂಡಿಸಿ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.