ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದ ಸರ್.ಎಂ.ವಿ. ಪ್ರತಿಮೆ ಬಳಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಕಾವೇರಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರೂ, ಬೆಳೆ ರಕ್ಷಿಸಿಕೊಳ್ಳಲು ನೀರು ಕೊಡುತ್ತೇವೆ. ಆದ್ಯತೆಯ ಮೇರೆಗೆ ಕುಡಿಯುವ ನೀರು ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.
ರೈತರ ಬೆಳೆಗೆ 5 ಗಂಟೆ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಇದಕ್ಕೆ ಒಪ್ಪಿಕೊಂಡಿದ್ದಾರೆ. 5 ಗಂಟೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊಡಲೇಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಹೇಳಿದ್ದಾರೆ.
ರೈತರ ಹಿತ ಕಾಪಾಡಲು ಬದ್ಧವಾಗಿದ್ದೇವೆ. ಅಧಿಕಾರಕ್ಕಾಗಿ ರೈತರ ಹಿತ ಬಲಿ ಕೊಡುವುದಿಲ್ಲ. ಮಳೆಯಾಶ್ರಿತ ಪ್ರದೇಶದಲ್ಲಿ ಶೇ. 50ರಷ್ಟು ಬೆಳೆ ನಾಶವಾಗಿದೆ. ನೀರಾವರಿ ಪ್ರದೇಶದಲ್ಲಿ ಮುಂಗಾರು ಬೆಳೆ ಉಳಿಸಲು ನೀರು ಒದಗಿಸಲಾಗುವುದು. ಕುಡಿಯುವ ನೀರಿಗಾಗಿ ವರ್ಷಕ್ಕೆ 35 ಟಿಎಂಸಿ ಅಡಿ ನೀರು ಅಗತ್ಯವಿದ್ದು, ಅದಕ್ಕೆ ನೀರು ಉಳಿಸಿಕೊಂಡು, ರೈತರ ಬೆಳೆ ರಕ್ಷಿಸಲಾಗುವುದು ಎಂದು ಹೇಳಿದ್ದಾರೆ.