ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ ಇಳುವರಿ ನಷ್ಟ ಸಂಭವಿಸಿರುವ ಹಿನ್ನೆಲೆಯಲ್ಲಿ ತೊಗರಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ (Mid Season adversity Invoke) ಪ್ರಸ್ತಾವನೆ ಸಲ್ಲಿಸಲು ಗುರುವಾರ ಜಿಲ್ಲಾಧಿಕಾರಿ ಬಿ. ಫೌಜಿಯ್ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ನಿರ್ಧರಿಸಿದೆ.
ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಕುರಿತಂತೆ ಸುದೀರ್ಘವಾಗಿ ಚರ್ಚಿಸಿ ಇದಕ್ಕೆ ಪೂರಕವಾಗಿ ಮುಂದಿನ ಮೂರು ದಿನಗಳಲ್ಲಿ (ನವೆಂಬರ್ 5 ರೊಳಗೆ) ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಜಂಟಿಯಾಗಿ ಜಿಲ್ಲೆಯಾದ್ಯಂತ ತೊಗರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಅವರು ಸೂಚಿಸಿದರು.
ಬೆಳೆ ಸಮೀಕ್ಷೆ ಮಾಡುವಾಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 10 ರಂತೆ ಬೆಳೆ ಪ್ರದೇಶಗಳನ್ನು ರ‌್ಯಾಂಡಮ್ ಆಗಿ ಪ್ರಯೋಗಕ್ಕೆ ಒಳಪಡಿಸಬೇಕು. ಪಾರದರ್ಶಕವಾಗಿ ಮತ್ತು ನಿಖರವಾಗಿ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಾಟೀಲ್ ಮಾತನಾಡಿ, ಸತತವಾಗಿ ವರುಣ ಅವಕೃಪೆಯಿಂದ ಜಿಲ್ಲೆಯಲ್ಲಿ ತೊಗರಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿ ರೈತ ಸಮುದಾಯ ಸಂಕಷ್ಟದಲ್ಲಿದ್ದು, ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಕೋರಬೇಕೆಂದು ಅಂಕಿ-ಸಂಖ್ಯೆ ಸಮೇತ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಕೃಷಿ ಉನಿರ್ದೇಶಕ ಸೋಮಶೇಖರ ಬಿರಾದಾರ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಲೀಡ್ ಬ್ಯಾಂಕ್ ಮಾನ್ಯೇಜರ್ ಸದಾಶಿವ ರಾತ್ರಿಕರ್, ವಿಮಾ ಕಂಪನಿ ಪ್ರತಿನಿಧಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿದ್ದರು.