ಮೈಸೂರು: ರೈತ ಸಂಘಟನೆಗಳ ಪ್ರತಿಭಟನೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರೈತರು ಹಸಿರು ಶಾಲು ಹಿಡಿದು ಮೈಸೂರಿನ ಟಿ.ಕೆ.ಬಡಾವಣೆಯಲ್ಲಿನ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದ್ದು, ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50ಕ್ಕೂ ಹೆಚ್ಚು ರೈತ ಮುಖಂಡರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಂತೆ ಕುರುಬೂರು ಶಾಂತಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲವು ರೈತ ಮುಖಂಡರು ಹಾಗೂ ರೈತ ಮಹಿಳೆಯರು ರಸ್ತೆಯಲ್ಲಿಯೇ ಮಲಗಿ ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.