ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ ನಾಲ್ಕು ವಾರ ಗಡುವು ನೀಡಿದೆ. ಸರ್ಕಾರ ತಕ್ಷಣ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಿದೆ ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.
ಅವಧಿ ಮುಗಿದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮತ್ತು ಕ್ಷೇತ್ರ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಸರ್ಕಾರಕ್ಕೆ 4 ವಾರಗಳ ಗಡುವು ನೀಡಲಾಗಿದೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಕೋರಿದ್ದರು.