ಬೆಂಗಳೂರು: ರಾಜ್ಯದಲ್ಲಿ ಅರಣ್ಯ, ಕಂದಾಯ ಭೂಮಿ ವಿಚಾರದಲ್ಲಿ ಸಮಸ್ಯೆಗಳಿದ್ದು, ಜಂಟಿ ಸರ್ವೇ ಮೂಲಕ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಜಿಲ್ಲೆಯ ಶಾಸಕರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮಾತನಾಡಿ, ಡೀಮ್ಡ್ ಅರಣ್ಯ ಎಂದು ಘೋಷಿಸಲಾದ ಸರ್ವೇ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗಿರುವಂತೆ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಪ್ರತಿ ಜಿಲ್ಲೆಯ ಸಮಸ್ಯೆಗಳ ಕುರಿತಾಗಿ ಪ್ರತ್ಯೇಕ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಿಲ್ಲ. ಎಲ್ಲ ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸರ್ವೇ ಮಾಡಿಸಿದ್ದಲ್ಲಿ ಎಲ್ಲಾ ಮಾಹಿತಿಯನ್ನು ಒಟ್ಟುಗೂಡಿಸಿ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಸಮಸ್ಯೆ ಬಗೆಹರಿಸಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಗಳನ್ನು ಬಗೆಹರಿಸಲು ಜಂಟಿ ಸರ್ವೇ ಕೈಗೊಳ್ಳುವುದಾಗಿ ಹೇಳಿದ್ದಾರೆ.