
ಬೆಂಗಳೂರು: ಇನ್ನು ಮುಂದೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿ ಯಾವುದೇ ತಿದ್ದುಪಡಿ ಮಾಡಿಕೊಳ್ಳುವಂತಿದ್ದಲ್ಲಿ ಆಫ್ಲೈನ್ ಬದಲಿಗೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ಅಂಕಪಟ್ಟಿಯಲ್ಲಿ ಅಭ್ಯರ್ಥಿ, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ ಮೊದಲಾದ ತಿದ್ದುಪಡಿಗಳಿದ್ದಲ್ಲಿ ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ತಿದ್ದುಪಡಿ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಮುಖ್ಯ ಶಿಕ್ಷಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ನಲ್ಲಿ ಶಾಲಾ ಲಾಗಿನ್ ಮೂಲಕ ಪ್ರಸ್ತಾವನೆ ಸಲ್ಲಿಸಿ ಇದಕ್ಕೆ ನಿಗದಿತ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.
ಯಾವುದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ನಿಗದಿತ ಶುಲ್ಕ ಪಾವತಿಸಬೇಕು. ಈ ಸೌಲಭ್ಯ ಇಲ್ಲದವರಿಗೆ ಆನ್ಲೈನ್ ನಲ್ಲಿ ಶುಲ್ಕ ಪಾವತಿಗೆ ವೆಬ್ಸೈಟ್ನಲ್ಲಿ ಚಲನ್ ನೀಡಿದ್ದು, ಅದನ್ನು ಡೌನ್ಲೋಡ್ ಮಾಡಿಕೊಂಡು ಯೂನಿಯನ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿಸಬಹುದು.
ತಿದ್ದುಪಡಿಗೆ ಸಲ್ಲಿಸುವ ಯಾವುದೇ ದಾಖಲೆಗಳು ನಕಲಿ ಆಗಿದ್ದರೆ ಸಂಬಂಧಿಸಿದ ವಿದ್ಯಾರ್ಥಿ ಮತ್ತು ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಲಾಗಿದೆ.