ಬೆಂಗಳೂರು : ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ ರಚಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ದಕ್ಷಿಣ ಕನ್ನಡ ಜಿಲ್ಲೆಯು ಹತ್ತು ಹಲವಾರು ಪ್ರವಾಸಿ ತಾಣಗಳನ್ನು ಹೊಂದಿದ್ದು, ಈ ಸಣ್ಣ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದರೆ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ, ಗ್ರಾಮಗಳಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ಗ್ರಾಮ ಪಂಚಾಯತಿಗಳಿಗೂ ಹೆಚ್ಚಿನ ಆದಾಯ ಬರಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗ್ರಾಮಪಂಚಾಯತಿ ಗ್ರಂಥಾಲಯಗಳಲ್ಲಿ ಬ್ರಾಡ್ ಬ್ಯಾಂಡ್ ಇಂಟರ್ ನೆಟ್ ಸಂಪರ್ಕ, ಡಿಜಿಟಲ್ ಉಪಕರಣಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಒದಗಿಸುವ ಮೂಲಕ ಸಶಕ್ತಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಇದು ಜಾರಿಗೆ ಬರಲಿದ್ದು, ಗ್ರಂಥಾಲಯಗಳ ಪರಿಣಾಮಕಾರಿ ಬಳಕೆಗೆ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರು ನೀಡುವ ಲಿಖಿತ ದೂರು, ಮನವಿಗಳನ್ನು, ಕಾಲಮಿತಿಯಲ್ಲಿ ಪರಿಹರಿಸಬೇಕು. 3 ತಿಂಗಳೊಳಗೆ ಇಂತಹ ದೂರುಗಳನ್ನು ಇತ್ಯರ್ಥ ಪಡಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.