ಬೆಂಗಳೂರು: ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದು, ವಿದ್ಯುತ್ ವೈರ್ ತುಳಿದು ಬಾಣಂತಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ವೈಟ್ ಫೀಲ್ಡ್ ನ ಕಾಡುಗೋಡಿ ಬಳಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತಾಯಿ ಹಾಗೂ ಮಗು ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಜೀವ ದಹನಗೊಂಡಿದ್ದರು. ಕಾಡುಗೋಡಿ ಬಳಿ ಮುಖ್ಯ ರಸ್ತೆಯ ಫುಟ್ ಪಾತ್ ಮೇಲೆಯೇ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮಹಿಳೆ ಸೌಂದರ್ಯ ಹಾಗೂ ಮಗು ಲೀಲಾ ಮೃತಪಟ್ಟಿದ್ದರೆ ಸೌಂದರ್ಯ ಪತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಬೆನ್ನಲ್ಲೇ ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ಘಟನಾ ಸ್ಥಳದಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ ಎಚ್ಚತ್ತ ಸರ್ಕಾರ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ.