ಮಂಡ್ಯ : ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ( CWRC ) ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸುವಂತೆ ನಿರ್ದೇಶನ ನೀಡಿದೆ.
ಈ ಹಿನ್ನೆಲೆ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ನೀರು ಹರಿಸಿ ಸರ್ಕಾರ ರೈತರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರ, ಪ್ರಾಧಿಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಲಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸದಂತೆ ರೈತ ಹಿತರಕ್ಷಣಾ ಸಮಿತಿ ಕಳೆದ 80 ದಿನಗಳಿಂದ ರೈತರ ಹೋರಾಟ ನಡೆಯುತ್ತಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 17ಟಿಎಂಸಿ ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ ಎಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಹೇಳಿದ್ದರು. ಆದರೆ ಕರ್ನಾಟಕದ ಮನವಿಗೆ ಸ್ಪಂದಿಸದ ಪ್ರಾಧಿಕಾರ ತಮಿಳುನಾಡು ಪರ ತೀರ್ಪು ನೀಡಿದೆ. ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ನಿರ್ದೇಶನ ನೀಡಿದೆ.