ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ ಕುರಿತಾಗಿ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
2018ರಲ್ಲಿ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿ, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಇದರ ವಿರುದ್ಧ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು.
ಈಗ ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದು ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತ ತನಿಖೆಗೆ ಹಸ್ತಾಂತರಿಸಲು ಚಿಂತನೆ ನಡೆದಿದೆ.
ಎಜಿ ಶಶಿಕಿರಣ್ ಶೆಟ್ಟಿ ಅವರ ಅಭಿಪ್ರಾಯ ಆಧರಿಸಿ ಗೃಹ ಇಲಾಖೆ ಆದೇಶ ಹಿಂಪಡೆಯುವ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.